ಕುಳೂರಿನ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ಶತಮಾನೋತ್ಸವದ ಉದ್ಘಾಟನಾ ಸಮಾರಂಭವು ವಿಜೃಂಭಣೆಯಿಂದ ಜರಗಿತು.
ಬೆಳಿಗ್ಗೆ ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರಾದ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ಹಾಗೂ ಅಧ್ಯಕ್ಷರಾದ ಮೊಹಮ್ಮದ್ ಹಾಜಿ ಕಂಚಿಲರವರು ಧ್ವಜಾರೋಹಣಗೈಯುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಬಳಿಕ ಹಗ್ಗ ಜಗ್ಗಾಟ ಸ್ಪರ್ಧೆ ನಡೆಯಿತು.
ಅಪರಾಹ್ನ ನಡೆದ ಶತಮಾನೋತ್ಸವ ಉದ್ಘಾಟನಾ ಕಾರ್ಯಕ್ರಮವನ್ನು ಕಾಸರಗೋಡಿನ ಮಾನ್ಯ ಸಂಸದರಾದ ರಾಜ್ ಮೋಹನ್ ಉಣ್ಣಿತ್ತಾನ್ ಉದ್ಘಾಟಿಸಿದರು. ಬಳಿಕ ಅವರು ಮಾತನಾಡುತ್ತಾ 'ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ನೀಡುವಲ್ಲಿ ಹೆತ್ತವರು ಮತ್ತು ಶಿಕ್ಷಕರ ಪಾತ್ರ ಮಹತ್ತರವಾದುದು. ಮಕ್ಕಳನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದೇ ಶಿಕ್ಷಣದ ಉದ್ದೇಶವಾಗಿದೆ' ಎಂದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಂಜೇಶ್ವರದ ಮಾನ್ಯ ಶಾಸಕರಾದ ಎ. ಕೆ. ಎಂ ಅಶ್ರಫ್ ವಹಿಸಿದ್ದರು. ಶಾಲಾ ಶತಮಾನೋತ್ಸವ ಸಮಿತಿಯ ಗೌರವಾಧ್ಯಕ್ಷರೂ, ಹೇರಂಬ ಇಂಡಸ್ಟ್ರೀಸ್ ಮುಂಬೈನ ಅಧ್ಯಕ್ಷರಾದ ಸದಾಶಿವ ಕೆ ಶೆಟ್ಟಿ ಕುಳೂರು ಕನ್ಯಾನ ರವರು ಶಾಲಾ ಶತಮಾನೋತ್ಸವದ ಸವಿ ನೆನಪಿಗಾಗಿ ಶಾಲಾ ವಾಹನ ಹಾಗೂ ಸುಸಜ್ಜಿತ ರಂಗ ಮಂದಿರವನ್ನು ಕೊಡುಗೆಯಾಗಿ ನೀಡುವ ಘೋಷಣೆ ಮಾಡುವ ಮೂಲಕ ಗಮನ ಸೆಳೆದರು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಮೀಂಜ ಗ್ರಾಮ ಪಂಚಾಯತಿನ ಅಧ್ಯಕ್ಷೆ ಸುಂದರಿ ಆರ್ ಶೆಟ್ಟಿ, ಉಪಾಧ್ಯಕ್ಷರಾದ ಜಯರಾಮ ಬಲ್ಲಂಗುಡೇಲ್, ವಿದ್ಯಾಭ್ಯಾಸ ಮತ್ತು ಆರೋಗ್ಯ ಸ್ಥಾಯೀ ಸಮಿತಿ ಅಧ್ಯಕ್ಷೆ ಸರಸ್ವತಿ ಕೆ, ಕಾಸರಗೋಡು ಜಿಲ್ಲಾ ಪಂಚಾಯತ್ ಸದಸ್ಯರಾದ ಕಮಲಾಕ್ಷಿ, ಮಂಜೇಶ್ವರ ಬ್ಲಾಕ್ ಪಂಚಾಯತ್ ಸದಸ್ಯರಾದ ಅಶ್ವಿನಿ ಎಂ. ಎಲ್, ಮೀಂಜ ಗ್ರಾಮ ಪಂಚಾಯತ್ ಸದಸ್ಯರಾದ ಜನಾರ್ಧನ ಪೂಜಾರಿ ಕುಳೂರು, ಮಂಜೇಶ್ವರ ಉಪಜಿಲ್ಲಾ ವಿದ್ಯಾಧಿಕಾರಿ ದಿನೇಶ್ ವಿ, ಯುವ ಉದ್ಯಮಿಯೂ, ಶಾಲಾ ಶತಮಾನೋತ್ಸವ ಸಮಿತಿಯ ಗೌರವ ಸಲಹೆಗಾರರೂ ಆದ ಮೋಹನ್ ಶೆಟ್ಟಿ ಮಜ್ಜಾರ್ ಆಗಮಿಸಿದ್ದರು.
ಶಾಲಾ ಶತಮಾನೋತ್ಸವದ ಸವಿ ನೆನಪಿಗಾಗಿ ರಚನೆಯಾಗಲಿರುವ 'ಅರಳು' ಸ್ಮರಣ ಸಂಚಿಕೆಯ ಮುಖ ಪುಟವನ್ನು ಕಾಸರಗೋಡಿನ ಮಾನ್ಯ ಸಂಸದರು ಅನಾವರಣಗೊಳಿಸಿದರು.
ಶಾಲಾ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷ ಸತೀಶ್ ಎಲಿಯಾಣ, ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಮೊಹಮ್ಮದ್ ಹಾಜಿ ಕಂಚಿಲ, ಮಾತೃ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುನೀತ ಕುಳೂರು, ಪ್ರೀ ಪ್ರೈಮರಿ ವಿಭಾಗದ ರಕ್ಷಕ-ಶಿಕ್ಷಕ ಸಂಘದ ಅಧ್ಯಕ್ಷೆ ಸುಹಾಸಿನಿ ಕುಳೂರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕರಾಗಿದ್ದ ಸತ್ಯನಾರಾಯಣ ಶರ್ಮ ಪಿ ರವರು ಪ್ರಾಸ್ತಾವಿಕವಾಗಿ ಮಾತನಾಡಿದರು.
ಇದೇ ಸಂದರ್ಭದಲ್ಲಿ ಶಾಲೆಯಲ್ಲಿ ಸುಮಾರು ಆರು ವರ್ಷಗಳ ಕಾಲ ಮುಖ್ಯ ಶಿಕ್ಷಕರಾಗಿ ದುಡಿದು, ಶಾಲೆಯ ಸರ್ವಾಂಗೀಣ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರ ವಹಿಸಿದ ಸತ್ಯನಾರಾಯಣ ಶರ್ಮ ಪಿ ರವರನ್ನು ಶಾಲಾ ಶತಮಾನೋತ್ಸವ ಸಮಿತಿಯ ಪರವಾಗಿ, ಊರ ವಿದ್ಯಾಭಿಮಾನಿಗಳ ಪರವಾಗಿ ಸನ್ಮಾನಿಸಿ ಗೌರವಿಸಲಾಯಿತು.
ಶಾಲಾ ಶತಮಾನೋತ್ಸವ ಉದ್ಘಾಟನಾ ಸಮಾರಂಭದ ಪ್ರಯುಕ್ತ ನಡೆದ ಶಾಲಾ ಮಕ್ಕಳ ಹಾಗೂ ಊರವರ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಶಾಲಾ ಶತಮಾನೋತ್ಸವ ಸಮಿತಿಯ ಪ್ರಧಾನ ಕಾರ್ಯದರ್ಶಿ ಜಯರಾಜ್ ಶೆಟ್ಟಿ ಚಾರ್ಲ ಸ್ವಾಗತಿಸಿ, ಶಿಕ್ಷಕಿ ನಯನ ಎಂ ವಂದಿಸಿದರು. ಶಾಲಾ ಶಿಕ್ಷಕ ಜಯಪ್ರಶಾಂತ್ ಪಾಲೆಂಗ್ರಿ ಕಾರ್ಯಕ್ರಮ ನಿರೂಪಿಸಿದರು.
ಬಳಿಕ ಶಾಲಾ ಮಕ್ಕಳು, ಸ್ಥಳೀಯ ಅಂಗನವಾಡಿ ಪುಟಾಣಿಗಳು, ರಕ್ಷಕ-ಶಿಕ್ಷಕ ಸಂಘ ಮತ್ತು ಹಳೆ ವಿದ್ಯಾರ್ಥಿ ಸಂಘದ ಸದಸ್ಯರು, ಕುಟುಂಬಶ್ರೀ ಸದಸ್ಯೆಯರು ಹಾಗೂ ಫ್ರೆಂಡ್ಸ್ ಆರ್ಟ್ಸ್ ಏಂಡ್ ಸ್ಪೋರ್ಟ್ಸ್ ಕ್ಲಬ್ ಸದಸ್ಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಜರಗಿದವು.
ಶತಮಾನೋತ್ಸವ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದು ಸಹಕರಿಸಿದರು.
No comments:
Post a Comment